ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ ಸೋರಿಕೆಗೆ ಮೂವರು ಕಾರ್ಮಿಕರ ಬಲಿ, ಇಬ್ಬರ ಸ್ಥಿತಿ ಗಂಭೀರ

05-08-26 06:20 pm       HK News Staffer   ಕ್ರೈಂ

ಜಿಲ್ಲೆಯ ಕಡೆಯಚೂರು-ಬಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಘಟಕದಲ್ಲಿ ಬುಧವಾರ ಭೀಕರ ರಾಸಾಯನಿಕ ಸೋರಿಕೆ ಸಂಭವಿಸಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ದುರಂತದ ಬೆನ್ನಲ್ಲೇ ಜಿಲ್ಲಾಡಳಿತ, ಪೊಲೀಸ್ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.

ಯಾದಗಿರಿ, ಆಗಸ್ಟ್ 05: ಜಿಲ್ಲೆಯ ಕಡೆಯಚೂರು-ಬಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಘಟಕದಲ್ಲಿ ಬುಧವಾರ ಭೀಕರ ರಾಸಾಯನಿಕ ಸೋರಿಕೆ ಸಂಭವಿಸಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ದುರಂತದ ಬೆನ್ನಲ್ಲೇ ಜಿಲ್ಲಾಡಳಿತ, ಪೊಲೀಸ್ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.

ಕಡೆಯಚೂರು-ಬಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿ.ಐ.ಎಲ್. ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಎಂಬ ಔಷಧ ತಯಾರಿಕಾ ಕಂಪನಿಯಲ್ಲಿ ಈ ಅವಘಡ ಸಂಭವಿಸಿದೆ. ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ರಾಸಾಯನಿಕ ಸೋರಿಕೆಯಾಗಿದ್ದು, ವಿಷಕಾರಿ ಅನಿಲ ಹರಡಿದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮೃತರನ್ನು ತೆಲಂಗಾಣ ಮೂಲದ ಕಟ್ಲಾ ಗಣೇಶ್, ಮಧ್ಯಪ್ರದೇಶದ ವಿಕ್ರಮ್ ಸಿಂಗ್ ಹಾಗೂ ಸಂಜಯ್ ಸಿಂಗ್ ಎಂದು ಗುರುತಿಸಲಾಗಿದೆ.

ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ

ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ಮಂಚಲ್ ಹೇಮಂತ್ ಮತ್ತು ಮಂಚಲ್ ಶಿವಕುಮಾರ್ ಎಂಬ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ತಕ್ಷಣವೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.

ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ-ಪೂರ್ವ ವಲಯ ಐಜಿಪಿ ಶಾಂತನು ಸಿನ್ಹಾ, ಯಾದಗಿರಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಸ್‌ಪಿ ಪೃಥ್ವಿಕ್ ಶಂಕರ್, ಸಿ.ಐ.ಎಲ್. ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಸಾಯನಿಕ ಸೋರಿಕೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ತನಿಖೆ ಆರಂಭಿಸಿದ್ದು, ಕೈಗಾರಿಕಾ ಸುರಕ್ಷತಾ ಕ್ರಮಗಳ ಕುರಿತು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.