ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ ; ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ ಎರಡು ದನ ಪತ್ತೆ, ನಾಲ್ವರು ಅರೆಸ್ಟ್!

21-09-26 06:16 pm       HK News Staffer   ಕ್ರೈಂ

ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಕಳವು ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿ, ಸೆ.21: ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಕಳವು ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳತ್ತೂರಿನ ವಸಂತಿ ಸುನೀತಾ ಕ್ವಾಡ್ರಸ್ ಎಂಬವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಒಂದು ದನ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ದನಕ್ಕಾಗಿ ಹುಡುಕಾಟ ನಡೆಸಿದಾಗ ಸಮೀಪದಲ್ಲಿ ನಿಲ್ಲಿಸಿದ್ದ ಖಾಸಗಿ ಟೆಂಪೋವೊಂದು ಅನುಮಾನಕ್ಕೆ ಕಾರಣವಾಗಿತ್ತು. ಟೆಂಪೋವನ್ನು ಪರಿಶೀಲಿಸಿದಾಗ ಕಾಣೆಯಾಗಿದ್ದ ದನ ಸೇರಿದಂತೆ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿರುವುದು ಪತ್ತೆಯಾಗಿತ್ತು. ಈ ವೇಳೆ ದೂರುದಾರರನ್ನು ಕಂಡ ಆರೋಪಿಗಳು ಟೆಂಪೋ ಸಮೇತ ಸ್ಥಳದಿಂದ ಪರಾರಿಯಾಗಿದ್ದರು.

ಘಟನೆ ಕುರಿತು ದೂರು ದಾಖಲಿಸಿಕೊಂಡ ಶಿರ್ವ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ಮುಂದುವರಿದ ಭಾಗವಾಗಿ ಕಳತ್ತೂರಿನ ಉಮ್ಮರಬ್ಬ (64) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಉಮ್ಮರಬ್ಬನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶರೀಫ್ (31), ಶಂಶುದ್ದೀನ್ (57) ಹಾಗೂ ಮೊಹಮ್ಮದ್ ಆಸೀರ್ (24) ಅವರನ್ನು ಕಾಪು ತಾಲೂಕಿನ ಕೊಪ್ಪಲಂಗಡಿ ಬಳಿಯಲ್ಲಿ ವಾಹನ ಸಮೇತ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಳವು ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.