ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ ; ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಕೃಪಾ ಆಳ್ವ ಮತ್ತೊಮ್ಮೆ ಸಿಸಿಬಿ ವಿಚಾರಣೆಗೆ ಹಾಜರು

09-11-26 07:45 pm       HK News Staffer   ಕರ್ನಾಟಕ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಸೋಮವಾರ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು, ನ.9: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಸೋಮವಾರ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. 

ಕಳೆದ ವಾರವಷ್ಟೇ ಕೃಪಾ ಆಳ್ವಾಗೆ ನ್ಯಾಯಾಲಯವು ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಬರಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿತ್ತು. ಪ್ರಕರಣ ಸಂಬಂಧಿಸಿದ ವಿಡಿಯೋದಲ್ಲಿ ಕೃಪಾ ಆಳ್ವ ಮತ್ತು ಪವರ್ ಟಿವಿಯ ರಾಕೇಶ್ ಶೆಟ್ಟಿ ಕಾಣಿಸಿಕೊಂಡಿದ್ದರು. 

ವಿಚಾರಣೆಗೆ ಹಾಜರಾಗುವಂತೆ ನೀಡಿದ ನೋಟಿಸ್ ಮೇರೆಗೆ ಕೃಪಾ ಆಳ್ವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೈಬರ್ ಕ್ರೈಂ ಪೊಲೀಸರ ಮುಂದೆ ಹಾಜರಾಗಿದ್ದರು. ಎರಡೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ನವೆಂಬರ್​ 11ರಂದು ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ. ಇದಕ್ಕೂ ಮುನ್ನ ಕೃಪಾ ಆಳ್ವಾ ಪರ ವಕೀಲೆ ನಿಖಿತಾ ಮಾಧ್ಯಮದವರೊಂದಿಗೆ ಮಾತನಾಡಿ, ಕೃಪಾ ಆಳ್ವಾ ಅವರು ಈಗಾಗಲೇ ಎರಡು ಬಾರಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಮತ್ತೊಮ್ಮೆ ಬರುವುದಕ್ಕೆ ಸೂಚಿಸಿದ್ದರು. ಇದರಂತೆ ಇಂದು ವಿಚಾರಣೆಗೆ ಬಂದಿದ್ದಾರೆ ಎಂದರು.

ವಿದೇಶಕ್ಕೆ ಹೋಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ವಕೀಲೆ, ಕೃಪಾ ಆಳ್ವಾ ಅವರು ಮಗಳೊಂದಿಗೆ ವಿದೇಶಕ್ಕೆ ಹೋಗಿದ್ದರು. ಪೂರ್ವ ನಿಯೋಜಿತ ಪ್ರವಾಸವಾಗಿತ್ತು, ಹೊರತು ಬೇರೆ ಉದ್ದೇಶ ಇರಲಿಲ್ಲ ಎಂದು ತಿಳಿಸಿದರು.