ಕೆಪಿಎಸ್ಸಿ ಅಕ್ರಮ ನೇಮಕಾತಿ ಹಗರಣ ; ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪಾಲು 4.17 ಕೋಟಿ ! ಗಂಗ್ವಾರ್ - ಕನ್ನಾಳೆಗೆ 1.52 ಕೋಟಿ, ನ್ಯಾಯಾಲಯಕ್ಕೆ ಇಡಿ ವರದಿ ಸಲ್ಲಿಕೆ

17-11-26 12:09 pm       HK News Staffer   ಕರ್ನಾಟಕ

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿ ಅಮಾನತುಗೊಂಡಿರುವ ಆಯೋಗದ ಅಧ್ಯಕ್ಷ ಎಸ್. ಶಿವಶಂಕರಪ್ಪ ಸಾಹುಕಾರ್ ಮತ್ತು ಇತರ ಮೂವರ ವಿರುದ್ಧ ಬೆಂಗಳೂರಿನ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬೆಂಗಳೂರು, ನ.17: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿ ಅಮಾನತುಗೊಂಡಿರುವ ಆಯೋಗದ ಅಧ್ಯಕ್ಷ ಎಸ್. ಶಿವಶಂಕರಪ್ಪ ಸಾಹುಕಾರ್ ಮತ್ತು ಇತರ ಮೂವರ ವಿರುದ್ಧ ಬೆಂಗಳೂರಿನ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಸಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಗಳಿಸಿರುವ ಆರೋಪವನ್ನು ಇ.ಡಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಆಯೋಗದ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ, ಐಎಎಸ್ ಅಧಿಕಾರಿ ಹಾಗೂ ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ್ ಕನ್ನಾಳೆ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. 

ಇ.ಡಿ.ಯ ಅಧಿಕೃತ ಪ್ರಕಟಣೆಯ ಪ್ರಕಾರ, ಅಕ್ರಮ ಹಣದ ವಹಿವಾಟಿನಲ್ಲಿ ಸಾಹುಕಾರ್ ಅವರು ಸುಮಾರು 4.17 ಕೋಟಿ ರೂ. ಮೌಲ್ಯದ ಪಾಲು ಪಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಗೀತಾ ಶಿವಮೂರ್ತಿ ಅವರು 1.48 ಕೋಟಿ ರೂ. ಹಾಗೂ ಗಂಗ್ವಾರ್ ಮತ್ತು ಬಸವರಾಜ್ ಕನ್ನಾಳೆ ತಲಾ 1.52 ಕೋಟಿ ರೂ. ಮೌಲ್ಯದ ಅಕ್ರಮ ಹಣ ಗಳಿಸಿದ್ದಾರೆ ಎಂದು ಇಡಿ ಸಂಸ್ಥೆ ತಿಳಿಸಿದೆ. 

ಅಪರಾಧದಿಂದ ಗಳಿಸಿದ ಹಣವನ್ನು ಸ್ವಾಧೀನಪಡಿಸಿ, ಬಳಕೆ ಮಾಡುವುದು ಮತ್ತು ಮರೆಮಾಚುವ ಮೂಲಕ ಅದನ್ನು ಕಾನೂನುಬದ್ಧ ಆಸ್ತಿಯೆಂದು ಬಿಂಬಿಸುವ ಪ್ರಕ್ರಿಯೆಯಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಇ.ಡಿ. ತನ್ನ ದೂರಿನಲ್ಲಿ ಉಲ್ಲೇಖಿಸಿದೆ.

ಕರ್ನಾಟಕದ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 9ರಂದು ನಡೆದ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಕೆಪಿಎಸ್‌ಸಿ ನೇಮಕಾತಿಗಳಲ್ಲಿ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಭಾರತೀಯ ನ್ಯಾಯ ಸಂಹಿತೆ-2023ರ ಸೆಕ್ಷನ್ 318(3), 318(4), 336(2), 336(3) ಮತ್ತು 340(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.