ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ ಡಿಕ್ಕಿ, ನಾಲ್ವರು ಯುವಕರ ಬಲಿ

18-11-26 11:03 pm       HK News Desk   ಕರ್ನಾಟಕ

ಕಾರು ಮತ್ತು ಬೊಲೆರೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಯುವಕರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ, ನ 18: ಕಾರು ಮತ್ತು ಬೊಲೆರೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಯುವಕರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ನಂದಿ ಗಿರಿಧಾಮ ಪೊಲೀಸ್ ಠಾಣೆಯ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಅನಂತರ ರಸ್ತೆಯ ಇನ್ನೊಂದು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ವೇಳೆ ಎದುರಿಗೆ ಬಂದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮೃತರನ್ನು ಯಲಹಂಕ ಮೂಲದವರಾಗಿದ್ದು, ದಿನೇಶ್ (40), ವೈಷ್ಣವ್(28) ಜಗದೀಶ್(26) ಮತ್ತು ಪಟೇಲ (30) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದಿನೇಶ್ ಮತ್ತು ಸ್ನೇಹಿತರು ಚಿಕ್ಕಬಳ್ಳಾಪುರ ಕಡೆಗೆ ಜಾಲಿ ರೈಡ್ ಬಂದಿದ್ದರು ಎನ್ನಲಾಗಿದೆ. ಅತಿ ವೇಗದಿಂದ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ನಂತರ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಬೊಲೆರೋ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ ಬೊಲೆರೋ ವಾಹನದಲ್ಲಿದ್ದ ಚಾಲಕನ ಕಾಲು ಮುರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿಯೂ ಚಿಂತಾಜನಕವಾಗಿದ್ದು, ಆತನನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.