ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕು ಕಚೇರಿಗೆ ಲೋಕಾಯುಕ್ತ ದಾಳಿ, ಏಕಕಾಲದಲ್ಲಿ ಪರಿಶೀಲನೆ

12-08-26 02:08 pm       HK News Staffer   ಕರಾವಳಿ

ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಮಂಗಳೂರು, ಉಡುಪಿ ಹಾಗೂ ಕಾರವಾರ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ.

ಮಂಗಳೂರು, ಆ.12: ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಮಂಗಳೂರು, ಉಡುಪಿ ಹಾಗೂ ಕಾರವಾರ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ. 

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿರುವ ಕಂದಾಯ ವಿಭಾಗದ ಕಚೇರಿಗೆ ದಾಳಿ ನಡೆಸಲಾಗಿದೆ. ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಆರೋಪದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗಿನಿಂದಲೇ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.  

ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ 
ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಗೆ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಏಳು ಮಂದಿಯ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಕಂದಾಯ ಇಲಾಖೆಯ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಲಂಚದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿದ್ದಾರೆ.